ನವದೆಹಲಿ: 76ನೇ ಗಣರಾಜ್ಯೋತ್ಸವದ ಅಂಗವಾಗಿ ಇಂದು ದೆಹಲಿಯ ಕರ್ತವ್ಯ ಪಥದಲ್ಲಿ (Kartavya Path) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಬೆಳಗ್ಗೆ 10:30ಕ್ಕೆ ಸರಿಯಾಗಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸೇನಾ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಠಿ ಸಲ್ಲಿಸಲಾಯಿತು.
ಈ ಬಾರಿ ಮುಖ್ಯ ಅತಿಥಿಗಳಾಗಿ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಆಗಮಿಸಿದ್ದಾರೆ. ಹಾಗೆಯೇ ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ (Narendra Modi), ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಹುತಾತ್ಮ ಯೋಧರಿಗೆ ಮೋದಿ ಗೌರವ:
76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಮಡಿದ ವೀರರಿಗೆ ಗೌರವ ಸಲ್ಲಿಸಿದರು. ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮೋದಿ ಮತ್ತು ಇತರ ಗಣ್ಯರು ಮೆರವಣಿಗೆಯನ್ನು ವೀಕ್ಷಿಸಲು ಕರ್ತವ್ಯ ಪಥದಲ್ಲಿನ ವೇದಿಕೆಗೆ ತೆರಳಿದರು.